ವಿಶೇಷ ಅಭಿಯಾನದ ಮೂಲಕ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆಗೆ ಕ್ರಮ ವಹಿಸಿ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್28:
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದೇ ಬಾಕಿ ಇರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಅಭಿಯಾನ ಕೈಗೊಂಡು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಾಗಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ 2023ನೇ ಸಾಲಿನ 2ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕೆಲವು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಪೋಷಕರ ಅನಕ್ಷರತೆ ಹಾಗೂ ವಿವಿಧ ಕಾರಣಗಳಿಂದ ಜಿಲ್ಲೆಯಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಬಾಕಿ ಇರುವ ಎಲ್ಲ ಅರ್ಹ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಾಗಲು ಕ್ರಮವಹಿಸಬೇಕು. ಜಿಲ್ಲೆಯ ಎಲ್ಲ ಶಾಲೆಗಳಿಗೂ ತಕ್ಷಣವೇ ಮಾಹಿತಿ ನೀಡಿ, ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಶಿಕ್ಷಣ ಇಲಾಖೆಯ ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ 65292 ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ವರ್ಗದ 50608 ವಿದ್ಯಾರ್ಥಿಗಳು ಸೇರಿದಂತೆ ಮೆಟ್ರಿಕ್ ಪೂರ್ವದಲ್ಲಿ ಒಟ್ಟು 1,15,900 ವಿದ್ಯಾರ್ಥಿಗಳಿದ್ದಾರೆ. ಮೆಟ್ರಿಕ್ ನಂತರದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ 7993 ವಿದ್ಯಾರ್ಥಿಗಳು ಹಾಗೂ 5294 ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿದ್ದಾರೆ. ಕಳೆದ ಬಾರಿ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನದ ಅಂಕಿ ಅಂಶದ ಪ್ರಕಾರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಪೋರ್ಟಲ್‍ನಲ್ಲಿ ಪರಿಶಿಷ್ಟ ಜಾತಿಯ40751, ಪರಿಶಿಷ್ಟ ವರ್ಗದ 38053 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಆಯಾ ಶಾಲಾ ಮುಖ್ಯ ಶಿಕ್ಷಕರ ಮೂಲಕ ಮಾಹಿತಿ ನೀಡಿ, ಎಲ್ಲ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಾಗಲು ಅಗತ್ಯ ಕ್ರಮ ವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಾಳ್ ತಿಳಿಸಿದರು.
ಶಿಕ್ಷಣ ಇಲಾಖೆಯ ಡಿವೈಪಿಸಿ ತಿಪ್ಪೇಸ್ವಾಮಿ ಮಾತನಾಡಿ, ವಿದ್ಯಾರ್ಥಿ ವೇತನ ಸಲ್ಲಿಕೆಯ ಎಲ್ಲ ಪ್ರಕ್ರಿಯೆಯನ್ನು ಸಂಬಂಧಪಟ್ಟ ಶಾಲಾ ಶಿಕ್ಷಕರು ನಿರ್ವಹಿಸುತ್ತಿದ್ದಾರೆ. ಪೋಷಕರು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಪೋಷಕರು ಆಧಾರ್ ಹಾಗೂ ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸುವುದರಲ್ಲಿ ವಿಳಂಬ ಮಾಡುತ್ತಿದ್ದಾರೆ. ಆದಾಗ್ಯೂ ಶೀಘ್ರವಾಗಿ ಅರ್ಹ ವಿದ್ಯಾರ್ಥಿಗಳೆಲ್ಲರಿಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆಗೆ ಕ್ರಮವಹಿಸಲಾಗುವುದು ಎಂದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಚಿನ್ನಪ್ಪ ಮಾತನಾಡಿ, ಹೊಳಲ್ಕೆರೆ ತಾಲ್ಲೂಕಿನ ಸಿಂಗೇನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೌರ್ಜನ್ಯ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಬೇಕು ಜೊತೆಗೆ ಪರಿಹಾರಧನ ಮಂಜೂರು ಮಾಡಬೇಕು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮಕ್ಕೆ ಖುದ್ದು ಭೇಟಿ ನೀಡಲಾಗಿದೆ, ಪ್ರಕರಣ ದಾಖಲಿಸುವಲ್ಲಿ ಯಾವುದೇ ರೀತಿಯ ವಿಳಂಬ ಆಗಿಲ್ಲ. ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡು, ಪರಿಹಾರಧನ ಮಂಜೂರಾತಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಆಷಾಢ, ಶ್ರಾವಣದಿಂದ ಜಾತ್ರೆಗಳು ಪ್ರಾರಂಭವಾಗುತ್ತಿದ್ದು, ಎಸ್.ಸಿ, ಎಸ್.ಟಿ ದೌರ್ಜನ್ಯ ಪ್ರಕರಣಗಳು ನಡೆಯುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ಎರಡು ತಿಂಗಳಲ್ಲಿ ಪೊಲೀಸ್ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ, ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರಿಂದ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿವೆ ಎಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಚಿವ ಸಮಿತಿ ಸದಸ್ಯರಾದ ಹೇಮೇಗೌಡ ಹೇಳಿದರು.
ಇದಕ್ಕೆ ಪ್ರತಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಪ್ರತಿ ತಿಂಗಳ ಎರಡನೇ ಶನಿವಾರದಂದು ಪೊಲೀಸ್ ಠಾಣೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜೊತೆಗೆ ದಲಿತ ಕಾಲೋನಿಗಳಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜಾಗೃತಿ ಮೂಡಿಸುವುದರಿಂದ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಡಿ.ಓ.ಮೊರಾರ್ಜಿ ಮಾತನಾಡಿ, ಮೊಳಕಾಲ್ಮುರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಪರಿಶಿಷ್ಟರು ಹೋಟೆಲ್, ದೇಗುಲ, ಬಸ್‍ನಿಲ್ದಾಣ ಪ್ರವೇಶಕ್ಕೆ ಕಷ್ಟಸಾಧ್ಯದ ವಾತಾವರಣವಿದೆ, ಈ ಕುರಿತು ಕಳೆದ ಬಾರಿ ಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು, ಆದರೂ ಯಾವುದೇ ಕ್ರಮವಾಗಿಲ್ಲ, ಕಂದಾಯ ಇಲಾಖೆ, ಪೆÇಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿಯಾಗಿ ಭೇಟಿ ನೀಡಿ, ಪ್ರತಿ ಗಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ದೌರ್ಜನ್ಯ ಪ್ರಕರಣಗಳು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ದೌರ್ಜನ್ಯ ತಡೆ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿವಾರು ವೇಳಾಪಟ್ಟಿ ನಿಗಧಿಪಡಿಸಿ, ಮೊಳಕಾಲ್ಮುರು ತಾಲ್ಲೂಕಿನಿಂದಲೇ ಜಾಗೃತಿಗೆ ಚಾಲನೆ ನೀಡಲಾಗುವುದು ಎಂದರು.
54.12 ಲಕ್ಷ ಪರಿಹಾರಧನ ಮಂಜೂರು: ದೌರ್ಜನ್ಯ ನಿಯಂತ್ರಣ ಕಾಯ್ದೆ 1989ರ ಅಡಿಯಲ್ಲಿ ದಾಖಲಾಗಿದ್ದ ಒಟ್ಟು 42 ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 67 ಸಂತ್ರಸ್ಥರಿಗೆ ಒಟ್ಟು ರೂ.54,12,500/- ಪರಿಹಾರವನ್ನು ಈ ವರ್ಷದಲ್ಲಿ ನೀಡಲಾಗಿದೆ. ಈ ವರ್ಷದ ಏಪ್ರಿಲ್ ತಿಂಗಳಿನಿಂದ ಜೂನ್ ವರೆಗೆ ಜಿಲ್ಲೆಯಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪರಿಶಿಷ್ಟ ಜಾತಿಯ 12 ಪ್ರಕರಣಗಳು, ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ 06 ಸೇರಿದಂತೆ ಒಟ್ಟು 18 ಪ್ರಕರಣಗಳು ದಾಖಲಾಗಿವೆ. 1 ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೂ.4,12,500/- ಪರಿಹಾರ ನೀಡಲಾಗಿದೆ. 4 ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ 4,25,000/- ಪರಿಹಾರ ನೀಡಲಾಗಿದೆ. 37 ಜಾತಿ ನಿಂದನೆ, ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರೂ.45,75,000/- ಪರಿಹಾರ ಧನ ಮಂಜೂರು ಮಾಡಲಾಗಿದೆ ಎಂದರು.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ ಮೇ-2023ರ ಅಂತ್ಯಕ್ಕೆ 86 ಪ್ರಕರಣಗಳು ಬಾಕಿ ಇವೆ. ಮೇ ಮಾಹೆಯಲ್ಲಿ 05 ಪ್ರಕರಣಗಳನ್ನು ಸ್ವೀಕರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಡಿ.ಓ.ಮೊರಾರ್ಜಿ, ಬೋರಸ್ವಾಮಿ, ಓ.ಚಿನ್ನಪ್ಪ, ಬಿ.ಗುಜ್ಜಾರಪ್ಪ, ಹೇಮೇಗೌಡ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.