ಚಿತ್ರದುರ್ಗ ಡಿ.16:
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾರರಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ.ಪ್ಯಾಟ್) ಬಳಕೆ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಚಾಲನೆ ನೀಡಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ವಿದ್ಯುನ್ಮಾನ ಮತಯಂತ್ರ ತರಬೇತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಸಾರ್ವಜನಿಕರಿಗೆ ಮತ ಚಲಾಯಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಹಾಗೂ ಮತದಾನ ಖಾತ್ರಿ ಕುರಿತಂತೆ ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಮತದಾರರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಮತದಾರರು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ನಡೆಸಲಾಗುವ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿದ್ಯುನ್ಮಾನ ಮತಯಂತ್ರದ ಕಾರ್ಯ ವ್ಯವಸ್ಥೆ, ಮತದಾನ ಮಾಡಿದ ಬಗ್ಗೆ ಖಾತರಿ ಪಡಿಸಿಕೊಳ್ಳುವ ಕಾರ್ಯದಲ್ಲಿ ಪಾಲ್ಗೊಂಡು, ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
2024ರ ಫೆಬ್ರವರಿ 28 ರವರೆಗೆ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರಗಳ ಅರಿವು ಹಾಗೂ ಜಾಗೃತಿ ಅಭಿಯಾನ ನಡೆಯಲಿದ್ದು, ಜಿಲ್ಲೆಯಲ್ಲಿನ 1661 ಮತಗಟ್ಟೆಗಳ ವ್ಯಾಪ್ತಿಯ 1206 ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಗುವುದು. ಈ ಪ್ರಾತ್ಯಕ್ಷಿಕೆಯಲ್ಲಿ ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜಾಗೃತಿ ಅಭಿಯಾನ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ 13 ಮೊಬೈಲ್ ಪ್ರಾತ್ಯಕ್ಷಿಕೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ. 152 ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ ಅವರು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 175, ಮೊಳಕಾಲ್ಮುರು-207, ಚಳ್ಳಕೆರೆ-180, ಹಿರಿಯೂರು-203, ಹೊಸದುರ್ಗ-195 ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 246 ಅಣಕು ಪ್ರದರ್ಶನ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಚುನಾವಣಾ ಶಿರಸ್ತೆದಾರ್ ಮಲ್ಲಿಕಾರ್ಜುನ್ ಸೇರಿದಂತೆ ಚುನಾವಣಾ ಶಾಖೆಯ ಸಿಬ್ಬಂದಿ ಸೇರಿದಂತೆ ಮತ್ತಿತರರು ಇದ್ದರು