ಚಳ್ಳಕೆರೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಒತ್ತಾಯಿಸಿ ಹಾಗೂ ಸರ್ಕಾರದ ನಿರ್ಲಕ್ಷ್ಯತೆಯನ್ನು ಖಂಡಿಸಿ ಚಿತ್ರದುರ್ಗದ ಪ್ರಮುಖ ವೃತ್ತದಲ್ಲಿ ಶಾಸಕ ಟಿ.ರಘುಮೂರ್ತಿ, ಮಾಜಿ ಸಚಿವ ಹೆಚ್.ಆಂಜನೇಯ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಸತ್ಯಾಗ್ರಹ 151ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಹಾಗೂ ಸರ್ಕಾರದ ನಿರ್ಲಕ್ಷ್ಯತೆಯನ್ನು ಖಂಡಿಸಿ ರಾಜ್ಯಾದ್ಯಾಂತ ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಮೀಸಲಾತಿ ಹೆಚ್ಚಿಸುವಂತೆ ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರೂ ಸರ್ಕಾರ ಈ ಬಗ್ಗೆ ಕ್ರಮಕೈಗೊಳ್ಳದೆ ಭರವಸೆಗಳನ್ನು ನೀಡುತ್ತ ಬಂದಿರುವುದನ್ನು ಖಂಡಿಸಿದ ಪ್ರತಿಭಟನಕಾರರು ಈ ಕೂಡಲೇ ಮೀಸಲಾತಿ ಹೆಚ್ಚಳ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.