ಚಳ್ಳಕೆರೆ:ಮಧ್ಯ ಕರ್ನಾಟಕದ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ, ಐತಿಹಾಸಿಕ ಸುಪ್ರಸಿದ್ಧ ಕ್ಷೇತ್ರ ಹಾಗೂ ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿರುವ ಪವಾಡ ದೈವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಶ್ರೀ ಕ್ಷೇತ್ರ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಶುಕ್ರವಾರ ಜರುಗಿತು.
ಉರಿ ಬಿಸಿಲು, ಗಾಳಿ, ದೂಳು ಯಾವುದನ್ನೂ ಲೆಕ್ಕಿಸದೆ ತಿಪ್ಪೇರುದ್ರಸ್ವಾಮಿಯ ರಥೋತ್ಸವಕ್ಕೆ ಬೆಳಗ್ಗೆಯಿಂದಲೇ ಜನಸಾಗರ ಹರಿದು ಬಂದಿತ್ತು. ನಾಯಕನಹಟ್ಟಿಯ ದೊಡ್ಡ ಕೆರೆ ಕಟ್ಟಿಸಿದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ಪವಾಡಗಳ ಮೂಲಕ ಮಧ್ಯ ಕರ್ನಾಟಕದ ಜನಮನದಲ್ಲಿ ನೆಲೆ ನಿಂತಿದ್ದಾರೆ.
ತಿಪ್ಪೇರುದ್ರಸ್ವಾಮಿ ಐಕ್ಯವಾಗಿರುವ ಹೊರಮಠ ಹಾಗೂ ದೇವರ ವಿಗ್ರಹ ಹಾಗೂ ಮುಖ್ಯವಾಗಿರುವ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು ನಡೆಯುತ್ತಿದ್ದವು.
ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಮಧ್ಯಾಹ್ನ 3.45 ಗಂಟೆಯ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ತಿಪ್ಪೇರುದ್ರಸ್ವಾಮಿ ರಥವನ್ನು ರಥ ಬೀದಿಯಿಂದ ಹೊರಮಠದವರೆಗೆ ಎಳೆಯಲಾಯಿತು. ಈ ವೇಳೆ ಸಹಸ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿಭಾವದ ಸಮರ್ಪಣೆ ಅರ್ಪಿಸಿದರು.
55 ಲಕ್ಷ ರೂ.ಗೆ ಮುಕ್ತಿ ಬಾವುಟ ಹರಾಜು:
ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ಪ್ರಕ್ರಿಯೆಯಲ್ಲಿ ಹಲವರು ಭಾಗಿಯಾಗಿದ್ದರು. ಅಂತಿಮವಾಗಿ ಹಿರಿಯೂರು ಮಾಜಿ ಶಾಸಕ ಡಿ ಸುಧಾಕರ್ 55 ಲಕ್ಷ ರೂಪಾಯಿಗೆ ಮುಕ್ತಿ ಬಾವುಟವನ್ನು ಹರಾಜು ಪ್ರಕ್ರಿಯೆಯಲ್ಲಿ ತಮ್ಮದಾಗಿಸಿಕೊಂಡರು.
ನಂತರ ದೊಡ್ಡ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಜಾತ್ರೆಗೆ ಹರಿದು ಬಂದ ಭಕ್ತ ಸಾಗರ:
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಭಕ್ತ ಸಾಗರದ ದಂಡು ಹರಿದು ಬಂದಿತ್ತು. ಅಕ್ಕಪಕ್ಕದ ಆಂಧ್ರಪ್ರದೇಶ, ತೆಲಂಗಾಣ, ಸೇರಿ ಬಳ್ಳಾರಿ, ರಾಯಚೂರು, ತುಮಕೂರು, ಕೊಪ್ಪಳ ಗದಗ ಸೇರಿ ಮತ್ತಿತರರ ಭಾಗಗಳಿಂದ ಭಕ್ತರು ತಿಪ್ಪೇಶನ ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.
ರಥಕ್ಕೆ ಬಾಳೆಹಣ್ಣು ಹರಕೆ:
ಇನ್ನು, ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆಯೇ ಭಕ್ತರು ರಥಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ತನ್ನ ಇಷ್ಟಾರ್ಥಗಳನ್ನು ಪೂರೈಸಿಕೊಂಡರು.
ರಾರಾಜಿಸಿದ ರಾಜಕೀಯ ನಾಯಕರ ಭಾವಚಿತ್ರಗಳು:
ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವುದರಿಂದ ಶಾಸಕ ಟಿ ರಘುಮೂರ್ತಿ ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ಮುಖಂಡರುಗಳ ಅಭಿಮಾನಿಗಳು ಪೋಟೋ ಹಿಡಿದು ಜಯಘೋಷ ಕೂಗಿದರು ಎಂದಿನಂತೆ ಪುನೀತ್ ರಾಜಕುಮಾರ್ ಭಾವಚಿತ್ರ ಜಾತ್ರೆಯಲ್ಲಿ ಕಂಗೊಳಿಸಿತು.
ಬೀಗಿ ಬಂದೋಬಸ್ತ್:
ಜಾತ್ರೆಗೆ ಲಕ್ಷಾಂತರ ಮಂದಿ ಆಗಮಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಚಿತ್ರದುರ್ಗ ಜಿಲ್ಲೆಯ ಬಹುದೊಡ್ಡ ಜಾತ್ರೆ ಇದಾಗಿದ್ದರಿಂದ ವಿವಿಧ ಭಾಗಗಳಿಂದ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಹಿರಿಯೂರು, ಚಳ್ಳಕೆರೆ, ದಾವಣಗೆರೆ, ಜಗಳೂರು, ಹೊಸದುರ್ಗ, ಹೊಳಲ್ಕೆರೆ ಸೇರಿ ಮತ್ತಿತರ ಭಾಗಗಳಿಂದ ಭಕ್ತರಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ , ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ , ಕೆ ಎ ಎಸ್ ಅಧಿಕಾರಿ ಎನ್ .ರಘುಮೂರ್ತಿ, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಪ್ರಭಾಕರ್ ಮ್ಯಾಸನಾಯಕ, ಜೆಡಿಎಸ್ ಪಕ್ಷದ ಆಕಾಂಕ್ಷಿ ವೀರಭದ್ರಪ್ಪ, ಬಾಳೆಕಾಯಿ ರಾಮದಾಸ್,ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಓಬಳೇಶ್, ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂ.ಎಸ್.ಜಯರಾಂ,
ಸೇರಿದಂತೆ ವಿವಿಧ ಪಕ್ಷಗಳ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

