ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ
ಶಿಕ್ಷಣ ಪಡೆಯುವ ಮಕ್ಕಳನ್ನು ದುಡಿಮೆಗೆ ಹಚ್ಚದಿರಿ


-ಅಪರ ಜಿಲ್ಲಾಧಿಕಾರಿ. ಟಿ. ಜವರೇಗೌಡ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.12:
ಪೋಷಕರು ಶಿಕ್ಷಣ ಪಡೆಯುತ್ತಿರುವ ಮಕ್ಕಳನ್ನು ದುಡಿಮೆಗೆ ಹಚ್ಚಬಾರದು. ಮಕ್ಕಳನ್ನು ಕೆಲಸಕ್ಕೆ ಕಳುಹಿಸದೇ ಅವರಿಗೆ ಉತ್ತಮವಾದ ಶಿಕ್ಷಣ ನೀಡಬೇಕು. ಶಿಕ್ಷಣ ಪಡೆದ ಮಕ್ಕಳು ಮುಂದಿನ ದಿನಗಳಲ್ಲಿ ದೊಡ್ಡ ವ್ಯಕ್ತಿಗಳಾಗಿ ಬೆಳೆಯುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್, ಕಾರ್ಮಿಕ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಡತನ ಹಾಗೂ ಅನಕ್ಷರತೆ ಕಾರಣದಿಂದ ಪೋಷಕರು ತಮ್ಮ ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿಗೆ ದೂಡುತ್ತಾರೆ. ಚಿಕ್ಕ ವಯಸ್ಸಿನಲ್ಲಿ ಕಲಿಬೇಕು ಹೊರೆತು ಗಳಿಸುವುದಕ್ಕೆ ಹೋಗಬಾರದು. ಪೋಷಕರು ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸಿ ಇಂತಹ ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಹೊರತರಬೇಕು. ಮಕ್ಕಳು ವಿದ್ಯಾಭ್ಯಾಸ ಕಲಿತು ಮುಖ್ಯವಾಹಿನಿಗೆ ಬರಬೇಕು. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಬಾಲ ಕಾರ್ಮಿಕರು ಕಂಡು ಬಂದರೆ ತಕ್ಷಣವೇ ಕಾರ್ಮಿಕ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಬಾಲ ಮಕ್ಕಳನ್ನು ದುಡಿಮೆಗೆ ಇಟ್ಟುಕೊಳ್ಳುವುದು ಅಪರಾಧವಾಗಿದೆ ಎಂದರು.
ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ ಪ್ರಾಸ್ತವಿಕವಾಗಿ ಮಾತನಾಡಿ, ಇಂದಿನ ಮಕ್ಕಳೇ ನಾಳೆಯ ದೇಶದ ಉನ್ನತ ಪ್ರಜೆಗಳು. ಶಿಕ್ಷಣ ಮಕ್ಕಳ ಮೂಲಭೂತ ಹಕ್ಕು ಇದರಿಂದ ಅವರು ವಂಚಿತರಾಗಬಾರದು. ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ವರದಿ ಪ್ರಕಾರ ಭಾರತದಲ್ಲಿ 1.2 ಕೋಟಿಗೂ ಹೆಚ್ಚು ಮಕ್ಕಳು ಅಪಾಯಕಾರಿ ದುಡಿಮೆಗಳಲ್ಲಿ ತೊಡಗಿಕೊಂಡಿದ್ದಾರೆ. ಇಂತಹ ಬಾಲಕಾರ್ಮಿಕರನ್ನು ಮುಖ್ಯವಾಹಿನಿಗೆ ತಂದು ಶಿಕ್ಷಣ ಕೊಡಿಸಬೇಕಾದದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಬಾಲ ಕಾರ್ಮಿಕ ಪದ್ದತಿಯನ್ನು ವಿರೋಧಿಸಲು ಸರ್ಕಾರವು ವಿವಿಧ ಕಾನೂನುಗಳನ್ನು ಜಾರಿಗೆ ತಂದಿದೆ. ಚಿತ್ರದುರ್ಗ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಇಲಾಖೆಯಿಂದ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಅವರು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿದರು.
ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ :
ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರೌಢಶಾಲೆ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲೆ, ಭಾಷಣ, ಪ್ರಬಂಧ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ನಗದು ಬಹುಮಾನ ವಿತರಿಸಿ ಸನ್ಮಾನಿಸಲಾಯಿತು.
ಪ್ರಬಂಧ ಸ್ಪರ್ಧೆಯಲ್ಲಿ ಚಳ್ಳಕೆರೆ ತಾಲೂಕು ಪರುಶುರಾಂಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಡಿ.ಮೈನಾ ಪ್ರಥಮ ಬಹುಮಾನ, ಚಿತ್ರದುರ್ಗ ನಗರದ ಅಲ್ಪಸಂಖ್ಯಾತ ಮೊರಾರ್ಜಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ದಾಕ್ಷಾಯಿಣಿ.ಎನ್ ದ್ವಿತೀಯ, ಮೊಳಕಾಲ್ಮೂರು ಚಿಕ್ಕೋಬನಹಳ್ಳಿ ಆಂಜನೇಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು ವಿದ್ಯಾರ್ಥಿನಿ ಈ.ಅಲ್ಫೀಯಾ ಬಾನು ತೃತೀಯ ಸ್ಥಾನ ಪಡೆದಿದ್ದಾರೆ.
ಭಾಷಣ ಸ್ಪರ್ಧೆಯಲ್ಲಿ ಚಿತ್ರದುರ್ಗ ತಾಲೂಕು ತುರವನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿನಿಯರಾದ ಟಿ.ಲಾವಣ್ಯ ಪ್ರಥಮ ಹಾಗೂ ಸಿ.ಡಿ.ಲಕ್ಷ್ಮೀ ತೃತೀಯ, ಚಿತ್ರದುರ್ಗ ನಗರದ ವಿದ್ಯಾವಿಕಾಸ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಡಿ.ವಿ.ನವಮಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಚಿತ್ರಕಲೆಯಲ್ಲಿ ಚಿತ್ರದುರ್ಗ ನಗರದ ವಿದ್ಯಾವಿಕಾಸ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಎಂ.ವೈ.ಭಾವಿನ್ ಪ್ರಥಮ, ತುರವನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿಗಳಾದ ಎಂ.ಚಂದನ್ ದ್ವಿತೀಯ ಹಾಗೂ ಡಿ.ಎ.ಯಶವಂತ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಬಂಧ ಹಾಗೂ ಭಾಷಣೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು ವೇದಿಕಯ ಮೇಲೆ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ಹಾಗೂ ಬಾಲ ಕಾರ್ಮಿಕ ಪದ್ದತಿಯಿಂದ ವಿಮುಕ್ತನಾದ ವಿದ್ಯಾರ್ಥಿ ಕುಟುಂಬಕ್ಕೆ ಕಾರ್ಮಿಕ ಆಹಾರ ಧಾನ್ಯದ ಕಿಟ್ ವಿತರಿಸಲಾಯಿತು.
ಗಮನ ಸೆಳೆದ ವಿದ್ಯಾರ್ಥಿಗಳ ಜಾಥಾ :
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಚಿತ್ರದುರ್ಗ ನಗರದ ಸಂಪಿಗೆ ಸಿದ್ದೇಶ್ವರ ಫ್ರೌಢಶಾಲೆ ಆವರಣದಿಂದ ತರಾಸು ರಂಗಮಂದಿರದವರೆಗೆ ಆಯೋಜಿಸಲಾಗಿದ್ದ ಬಾಲ ಕಾರ್ಮಿಕ ವಿರೋಧಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಮನಗೊಳಿ ಪ್ರೇಮಾವತಿ.ಎಂ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಾಲಕಾರ್ಮಿಕ ಪದ್ದತಿ ಅನಿಷ್ಠ ಪದ್ದತಿಯಾಗಿದೆ. ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಹೊರತರಬೇಕು. ಬಾಲಕಾರ್ಮಿಕರು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ದೂರು ನೀಡಬೇಕು ಎಂದರು.
ಸಂಪಿಗೆ ಸಿದ್ದೇಶ್ವರ ಫ್ರೌಢಶಾಲೆ ಆವರಣದಿಂದ ತರಾಸು ರಂಗ ಮಂದಿರದ ವರೆಗೆ ನಡೆದ ಜಾಥ ಸಾರ್ವಜನಿಕರ ಗಮನ ಸೆಳೆಯಿತು. ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ವಾದ್ಯ ನುಡಿಸುವುದರೊಂದಿಗೆ ಶಿಸ್ತುಬದ್ದ ಪ್ರಬಾತ್ ಬೇರಿಯನ್ನು ನಡೆಸಿದರು. ಜಾಥಾದಲ್ಲಿ ಬಾಲ ಕಾರ್ಮಿಕ ವಿರೋಧಿ ಘೋಷಣೆಗಳನ್ನು ಕೂಗಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್, ವಕೀಲರ ಸಂಘದ ಅಧ್ಯಕ್ಷ ಸಿ. ಶಿವು ಯಾದವ್, ಉಪಾಧ್ಯಕ್ಷ ಜಿ.ಸಿ ದಯಾನಂದ, ಪಿ.ಯು ಉಪನಿರ್ದೇಶಕ ಎನ್. ರಾಜು, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಜಿಲ್ಲಾ ದೈಹಿಕ ಶಿಕ್ಷಕ ಪರುಶುರಾಮ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಕಟ್ಟಡ ಕಾರ್ಮಿಕ ಅಧ್ಯಕ್ಷ ರಮೇಶ್ ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘಗಳ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Namma Challakere Local News
error: Content is protected !!