ಆಯಿಲ್ ಸಿಟಿಯ ಸಾಹುಕಾರ ಡಿ. ಸುಧಾಕರ್ ಇನ್ನು ನೆನಪು ಮಾತ್ರ

ಚಳ್ಳಕೆರೆ: ಆಯಿಲ್ ಸಿಟಿ ಹಾಗೂ ಮಿನಿ ಬಾಂಬೆ ಎಂದೇ ಖ್ಯಾತಿ ಪಡೆದಿರುವ ಚಳ್ಳಕೆರೆ ನಗರದ ರಾಜಕೀಯ ಅಂಗಳದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಹಿರಿಯ ರಾಜಕಾರಣಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಭಾನುವಾರ ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 63 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗಿನ ಜಾವ 3.15ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಂಧು ಬಳಗದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

‘ಸಾಹುಕಾರ’ ಎಂದೇ ಜನಪ್ರಿಯರಾಗಿದ್ದ ಡಿ. ಸುಧಾಕರ್ ಅವರು ದಾನಧರ್ಮ, ಬಡವರ ಮೇಲಿನ ಕಾಳಜಿ ಹಾಗೂ ಜನಪರ ಆಡಳಿತದ ಮೂಲಕ ಜಿಲ್ಲೆಯ ಜನಮನದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದರು. ದೀನದಲಿತರ ಆಶಾಕಿರಣವಾಗಿದ್ದ ಅವರು ಅನೇಕ ಕುಟುಂಬಗಳಿಗೆ ನೆರವಾಗುವ ಮೂಲಕ ಮಾನವೀಯ ನಾಯಕನಾಗಿ ಗುರುತಿಸಿಕೊಂಡಿದ್ದರು.

2004ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಕ್ಷೇತ್ರ ಮೀಸಲಾತಿಯಾಗಿದ್ದ ಹಿನ್ನೆಲೆ 2008ರಲ್ಲಿ ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದರು.
ನಂತರ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಹಾಗೂ ಮುಜರಾಯಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದರು. ಬಳಿಕ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರ್ಪಡೆಯಾದರು.

2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದರೂ ಸಚಿವ ಸ್ಥಾನ ಸಿಗಲಿಲ್ಲ. 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಅವರು, 2023ರಲ್ಲಿ ಹಿರಿಯೂರು ಕ್ಷೇತ್ರದಿಂದ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ಸಚಿವ ಸ್ಥಾನ ಅಲಂಕರಿಸಿದರು.

ಬಿ.ಕಾಂ ಪದವೀಧರರಾಗಿದ್ದ ಡಿ. ಸುಧಾಕರ್ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸಮಾಜ ಕಲ್ಯಾಣ, ಮುಜರಾಯಿ ಹಾಗೂ ಸಾಂಖ್ಯಿಕ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲೂ ಗುರುತಿಸಿಕೊಂಡಿದ್ದರು.

ಅವರ ಅಗಲಿಕೆಯಿಂದ ಚಿತ್ರದುರ್ಗ ಜಿಲ್ಲೆಯ ರಾಜಕೀಯ ವಲಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಜನಸೇವೆ, ದಾನಧರ್ಮ ಮತ್ತು ಬಡವರ ಮೇಲಿನ ಅವರ ಕಾಳಜಿ ಸದಾ ಜನಮನದಲ್ಲಿ ಉಳಿಯಲಿದೆ.

About The Author

Namma Challakere Local News
error: Content is protected !!